ಸೊರಬ : ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು
ಸೊರಬ ಪಟ್ಟಣದಲ್ಲಿ ಪೊಲೀಸ್ ವಸತಿಗೃಹಗಳ ಸಮುಚ್ಛಯ ಉದ್ಘಾಟನೆಗೆ ಮುನ್ನ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು.ಸೊರಬ ತಾಲೂಕಿನ ವರದಾ ನದಿಗೆ ಬ್ಯಾರೇಜ್ ಹಾಗೂ ತಡೆಗೋಡೆ ನಿರ್ಮಾಣಕ್ಕೆ 62 ಕೋಟಿ ರೂಪಾಯಿ ಮಂಜೂರಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು.
ಸೊರಬ ತಾಲೂಕಿನಲ್ಲಿ ಕೊರತೆ ಇರುವ ಶಿಕ್ಷಕರ ಶೇಕಡ 95 ರಷ್ಟು ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗುತ್ತಿದೆ ಎಂದ ಅವರು ಶಾಲಾ ಮಕ್ಕಳಿಗೆ ವಾರದ ಎರಡು ದಿನ ನೀಡಲಾಗುತ್ತಿದ್ದ ಮೊಟ್ಟೆಯನ್ನು ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ ಸಹಯೋಗದೊಂದಿಗೆ ಮುಂದಿನ ಮೂರು ವರ್ಷಗಳವರೆಗೆ ವಾರದ ಆರು ದಿನಗಳ ಕಾಲ ಮೊಟ್ಟೆ ವಿತರಿಸುವ ಕಾರ್ಯಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ಸರ್ಕಾರ 1500 ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಕವನ್ನು ಭರಿಸಲಿದೆ ಎಂದರು.
ಅಲ್ಲದೆ ಶಾಲಾ ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪೌಷ್ಟಿಕಾಂಶ ಯುಕ್ತ ಆಹಾರ ಸರಬರಾಜು ಮಾಡಲು ಉದ್ದೇಶಿಸಿದ್ದು ಪ್ರತಿ ದಿನ ಬೆಳಿಗ್ಗೆ 55 ಲಕ್ಷ ಮಕ್ಕಳಿಗೆ
ರಾಗಿ ಮಾಲ್ಟ್ ವಿತರಿಸಲಾಗುತ್ತಿದೆ ಎಂದರು.
ಸೊರಬ, ಶಿರಾಳಕೊಪ್ಪ ಮತ್ತು ಆನವಟ್ಟಿ ಸುತ್ತಮುತ್ತಲ ಪ್ರದೇಶಗಳ 354 ಗ್ರಾಮಗಳ ನಿವಾಸಿಗಳಿಗೆ ಶರಾವತಿ ನದಿಯಿಂದ ಶುದ್ಧ ಕುಡಿಯುವ ನೀರನ್ನು ಒದಗಿಸಲು ಸುಮಾರು 600 ಕೋಟಿ ರೂ ವೆಚ್ಚದ ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದ್ದು ಶೀಘ್ರದಲ್ಲಿ ಕಾರ್ಯಾರಂಭಗೊಳ್ಳುವ ಆಶಯ ಹೊಂದಿರುವುದಾಗಿ ತಿಳಿಸಿದರು.
ಜಿಲ್ಲೆಯ ಕೃಷಿ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ಸಹಕಾರಿಯಾಗುವಂತೆ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಉಪ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಅಲ್ಲದೆ ಕೃಷಿ ಚಟುವಟಿಕೆಗಳಿಗೆ ಸೋಲಾರ್ ಬಳಕೆಗೆ ಉತ್ತೇಜನ ನೀಡಲು ವಿಶೇಷ ಗಮನಹರಿಸಲಾಗುವುದು ಎಂದರು.ಅರಣ್ಯದಂಚಿನಲ್ಲಿ ವಾಸಿಸುವ ವನವಾಸಿಗಳಿಗೆ ಹಕ್ಕು ಪತ್ರ ನೀಡುವ ಬಗ್ಗೆ ಕ್ರಮವಹಿಸಲಾಗಿದೆ ಯಾರನ್ನು ಒಕ್ಕಲಿಬ್ಬಿಸುವ ಉದ್ದೇಶ ಸರ್ಕಾರದ ಮುಂದಿಲ್ಲ. ಹೊಸದಾಗಿ ಅರಣ್ಯ ಭೂಮಿ ಒತ್ತುವರಿ ಮಾಡುವವರನ್ನು ಸರ್ಕಾರ ಪುರಸ್ಕರಿಸಲಾಗದು ಎಂದರು.
ವಿಮಾನ ನಿಲ್ದಾಣದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಸರ್ಕಾರದ ವತಿಯಿಂದ ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದರು.ಈ ಸಂದರ್ಭದಲ್ಲಿ ಸೊರಬ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.