ಶಿವಮೊಗ್ಗ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯ ಇದೀಗ ಆರಂಭ ವಾಗುತ್ತಿದ್ದು, ಬಿಜೆಪಿ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಅಭ್ಯರ್ಥಿ ಯಾಗಿ ಘೋಷಿಸಿದೆ. ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಧುಬಂಗಾರಪ್ಪ ಆಯ್ಕೆಯಾಗಿದ್ದು, ಇದೀಗ ಹಣಾಹಣಿಗೆ ಚುನಾವಣಾ ಕಣ ಸಜ್ಜುಗೊಳ್ಳುತ್ತಿದೆ.
ಬಿಜೆಪಿ ಅಭ್ಯರ್ಥಿಯಾಗಿರುವ ಬಿ.ವೈ. ರಾಘವೇಂದ್ರ ಮಾ. ೨೮ಂದು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಲಿದ್ದಾರೆ. ಅಂದು ಮಧ್ಯಾಹ್ನ ೧ ರಿಂದ ೧.೩೦ರ ವೇಳೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮೊದಲು ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಜಿಲ್ಲಾಧಿಕಾರಿಗಳ ಕಛೇರಿವರೆಗೆ ಬೃಹತ್ ಮೆರವಣಿಗೆ ನಡೆಸುವ ಯೋಜನೆಯನ್ನು ಬಿಜೆಪಿ ಹೊಂದಿದೆ ಎನ್ನಲಾಗಿದೆ.
ಚುನಾವಣಾ ದಿನಾಂಕ ಘೋಷಣೆ ಯಾಗುವ ಮೊದಲೇ ಬಿಜೆಪಿ ಕ್ಷೇತ್ರದಲ್ಲಿ ಬೂತ್‌ಮಟ್ಟದಿಂದ ಪ್ರಚಾರ ಕಾರ್ಯ ಆರಂಭಿಸಿತ್ತು. ಕಳೆದ ಐದು ತಿಂಗಳ ಹಿಂದೆ ಸಂಸದರಾಗಿ ಆಯ್ಕೆಯಾದ ನಂತರ ಕ್ಷೇತ್ರಕ್ಕೆ ಬೇಕಾದಂತಹ ಮತ್ತು ಅಗತ್ಯ ಬೇಡಿಕೆಗಳ ಕಡೆ ಹಾಗೂ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇನೆ ಎನ್ನುತ್ತಾರೆ ಸಂಸದ ಬಿ.ವೈ. ರಾಘವೇಂದ್ರ.
ಜಿಲ್ಲೆಯ ಜನತೆ ಒಂದು ದಿನದಲ್ಲಿ ರಾಜಧಾನಿಗೆ ತೆರಳಿ, ಕೆಲಸ ಕಾರ್ಯಗಳನ್ನು ಪೂರೈಸಿಕೊಂಡು ಮತ್ತೆ ವಾಪಾಸಾಗುವ ರೀತಿಯಲ್ಲಿ ಅನುಕೂಲವಾಗುವಂತೆ ಜನ್ ಶತಾಬ್ದಿ ರೈಲು ಸಂಚಾರವನ್ನು ಆರಂs ವಾಗಿದೆ. ಜಿಲ್ಲೆಯ ೭೫ ಸಾವಿರ ಕಾರ್ಮಿಕ ಕುಟುಂಬಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ರಾಗಿಗುಡ್ಡದ ಬಳಿ ಐದು ಎಕರೆ ಪ್ರದೇಶದಲ್ಲಿ ಇಎಸ್‌ಐ ಆಸ್ಪತ್ರೆಗೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಇದಕ್ಕಾಗಿ ಕೇಂದ್ರ ಸಚಿವರೊಂದಿಗೆ ಸತತ ಮಾತುಕತೆ ನಡೆಸಿದ ಪರಿಣಾಮ ಇದು ಯಶಸ್ವಿಯಾಗಲು ಸಾಧ್ಯವಾಗಿದೆ. ಅಲ್ಲದೆ, ಕೇಂದ್ರದ ಉಕ್ಕು ಮತ್ತು ಗಣಿ ಸಚಿವರೊಂದಿಗೆ ಮಾತುಕತೆ ನಡೆಸಿ, ಮತ್ತು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿಐಎಸ್‌ಎಲ್ ಕಾರ್ಖಾನೆಗೆ ೧೫೦ ಎಕರೆ ಗಣಿ ಮಂಜೂರಾತಿ ಮಾಡಿಸುವಲ್ಲಿಯೂ ಯಶಸ್ವಿಯಾಗಿದ್ದೇನೆ ಎನ್ನುತ್ತಾರೆ ಬಿವೈಆರ್.
ಕುಂಸಿ ಮತ್ತು ಅರಸಾಳು ರೈಲ್ವೇ ನಿಲ್ದಾಣಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಈಗಾಗಲೇ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಈ ಭಾಗದ ರೈಲ್ವೇ ನಿಲ್ದಾಣಗಳು ಅಭಿವೃದ್ಧಿಗೊಳ್ಳಲಿದೆ. ಮುಂಬರುವ ದಿನಗಳಲ್ಲಿ ಶಿವಮೊಗ್ಗ ನಗರದ ರೈಲ್ವೇ ನಿಲ್ದಾಣ ಒಂದು ಜಂಕ್ಷನ್ ಆಗುವ ರೀತಿಯಲ್ಲಿ ಯೋಜನೆ ರೂಪಿಸಿ, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ತಾವರೆಕೊಪ್ಪ, ಸಿಂಹಧಾಮವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವರೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗಿದೆ. ಇದೆಲ್ಲದರ ಜೊತೆ ನಮ್ಮ ತಂದೆ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಕಳೆದ ಆರು ತಿಂಗಳ ಹಿಂದೆ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆ ಸಲ್ಲಿಸಿದ ಸಂದರ್ಭದಲ್ಲಿ ಸ್ವತಃ ಡಿ.ಕೆ. ಶಿವಕುಮಾರ್ ಅವರೇ ಮಾಜಿ ಮುಖ್ಯಮಂತ್ರಿಗಳು ಸಲ್ಲಿಸಿರುವ ಬೇಡಿಕೆಗಳನ್ನು ಶೀಘ್ರದಲ್ಲೇ ಮಂಜೂರು ಮಾಡುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸಿದ್ದರ ಪರಿಣಾಮ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಹಣ ಮಂಜೂರಾಗಿದೆ. ಇದೆಲ್ಲವೂ ಸಹ ಕ್ಷೇತ್ರದ ಮತದಾರರು ಗಮನಿಸಿದ್ದಾರೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ನನ್ನನ್ನು ಪುನಃ ಆಯ್ಕೆ ಮಾಡುವ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರ ರಚನೆಗೆ ಕ್ಷೇತ್ರದ ಜನತೆ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ಕಾಂಗ್ರೆಸ್-ಜೆಡಿಎಸ್‌ನ ಮೈತ್ರಿಕೂಟದ ಅಭ್ಯರ್ಥಿಯಾಗಿ ಘೋಷಣೆಯಾಗಿರುವ ಮಧುಬಂಗಾರಪ್ಪ, ಗ್ರಾಮಾಂತರ ಭಾಗದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾದರೂ ಸಹ ನಾಮಪತ್ರ ಸಲ್ಲಿಕೆ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ವ್ಯಕ್ತವಾಗುತ್ತಿಲ್ಲ. ಜೆಡಿಎಸ್ ಜಿಲ್ಲಾಧ್ಯಕ್ಷ ಡಾ. ಆರ್.ಎಂ.ಮಂಜುನಾಥಗೌಡ ಹಾಗೂ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ ಅವರು ಮಧು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಕ್ಷೇತ್ರದಲ್ಲಿ ಜೆಡಿಎಸ್‌ನ ಶಕ್ತಿ ಏನೆಂಬುದನ್ನು ತೋರಿಸುವ ಉತ್ಸಾಹದಲ್ಲಿ ಈ ನಾಯಕರುಗಳು ಇದ್ದಾರೆ.
ಈ ನಡುವೆ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಹಿರಿಯ ನಾಯಕ ಕಾಗೋಡು ತಿಮ್ಮಪ್ಪರವರು ಜೆಡಿಎಸ್ ಅಭ್ಯರ್ಥಿಗೆ ಸಾತ್ ನೀಡುತ್ತಿದ್ದಾರೆಯೇ ಹೊರತು, ಉಳಿದ ಯಾವುದೇ ಕೈ ನಾಯಕರು ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಲ್ಲ ಎಂಬ ಆರೋಪ ಎಲ್ಲೆಡೆ
ಕೇಳಿಬರುತ್ತಿದೆ.
ಒಟ್ಟಾರೆ ಶಿವಮೊಗ್ಗ ಲೋಕಸಭಾ ಚುನಾವಣೆ ಕಾವು ಇದೀಗ ಏರಲಾ ರಂಭಿಸಿದೆ. ಆದರೆ ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಈ ಬಾರಿಯ ಚುನಾವಣಾ ಕಾವು ನಿರೀಕ್ಷಿತ ಪ್ರಮಾಣದಲ್ಲಿ ಏರುತ್ತಿಲ್ಲ ಎಂಬ ಅಭಿಪ್ರಾಯ ಎಲ್ಲೆಡೆ ವ್ಯಕ್ತವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಬಿಸಿಲಿನ
ತಾಪಮಾನದಷ್ಟೇ ಚುನಾವಣಾ ಕಾವು ಏರಿಕೆಯಾಗುತ್ತಿದೆ ಎಂಬುದನ್ನು ಕಾದು ನೋಡಬೇಕಿದೆ.