ಬೆಂಗಳೂರು: ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದ ಮಹಾನ್ ನಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯಾದಾಗ ಕೃಷಿಯಲ್ಲಿ ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಂ ಅವರು ಆಹಾರ ಭದ್ರತೆಯನ್ನು ಒದಗಿಸಿದರು.
ಜಗಜೀವನರಾಂ ಅವರು ರಕ್ಷಣಾ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದರೂ, ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ ಎಂದರು.