ಸಮ್ಮಿಶ್ರ ಸರ್ಕಾರಕ್ಕೆ ಅಸ್ಥಿರತೆ ಭೀತಿ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಿಎಸ್‌ವೈ ಆರೋಪ

ಬೆಂಗಳೂರು : ಸರ್ಕಾರಕ್ಕೆ ಅಸ್ಥಿರತೆ ಭೀತಿ ಎದುರಾಗಿರುವುದರಿಂದ ಬಿಜೆಪಿ ಶಾಸಕರನ್ನು ಸೆಳೆಯುವಂತಹ ಹೀನ ಕೃತ್ಯಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೈ ಹಾಕಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಆರೋಪಿಸಿದರು.
ನಗರದ ಅರಮನೆ ಮೈದಾನದಲ್ಲಿಂದು ನಡೆದ ರಾಜ್ಯ ಬಿಜೆಪಿ ವಿಶೇಷ ಶಾಸಕಾಂಗ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಯಾವ ಸಂದರ್ಭದಲ್ಲಿ ಸರ್ಕಾರ ಬೀಳುತ್ತದೆಯೋ ಎಂಬ ಆತಂಕ ಕುಮಾರಸ್ವಾಮಿ ಅವರಿಗಿದೆ. ಆದ್ದರಿಂದಲೇ ನಮ್ಮ ಪಕ್ಷದ ಶಾಸಕರನ್ನು ಸೆಳೆದುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಇದು ಎಂದಿಗೂ ಈಡೇರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ತಮ್ಮ ಶಾಸಕರ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಬೇರೆ ಪಕ್ಷದವರನ್ನು ಸೆಳೆದು ಸರ್ಕಾರವನ್ನು ಭದ್ರ ಮಾಡಿಕೊಳ್ಳುವ ಹುನ್ನಾರದಲ್ಲಿದ್ದಾರೆ. ನಮ್ಮ ಪಕ್ಷದ ಯಾವುದೇ ಶಾಸಕರು ಇದಕ್ಕೆ ಬಲಿಯಾಗುವುದಿಲ್ಲ ಎಂಬ ವಿಶ್ವಾಸವಿದೆ ಎಂದ ಅವರು, ಕಳೆದ ನಾಲ್ಕು ತಿಂಗಳಿಂದ ಸರ್ಕಾರ ಅಧಿಕಾರ ನಡೆಸುತ್ತಿದ್ದರೂ ಒಂದೇ ಒಂದೂ ಅಬಿವೃದ್ಧಿ ಕೆಲಸಗಳು ಆಗಿಲ್ಲ. ಅಧಿಕಾರಿಗಳ ವರ್ಗಾವಣೆ, ಹಗಲು ದರೋಡೆ ನಿರಂತರವಾಗಿ ನಡೆಯುತ್ತಿದೆ. ಈ ಸರ್ಕಾರ ಯಾವಾಗ ಬಿದ್ದು ಹೋಗುತ್ತದೆ ಎಂದು ಕಾಂಗ್ರೆಸ್-ಜೆಡಿಎಸ್ ಶಾಸಕರೂ ಹಿಡಿಶಾಪ ಹಾಕುತ್ತಿದ್ದಾರೆ. ರಾಜ್ಯದ ಜನತೆಗೆ ಈ ಸರ್ಕಾರ ಇದ್ದು ಸತ್ತಂತಾಗಿದೆ ಎಂದು ಟೀಕಿಸಿದರು.
ಕಿಂಗ್‌ಪಿನ್ನರ್‌ಗಳ ಮೂಲಕ ಬಿಜೆಪಿಯವರು ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಕುಮಾರಸ್ವಾಮಿ ಹೇಳುತ್ತಿದ್ದಾರೆ. ನಿಮ್ಮ ಕೈಯಲ್ಲಿ ಅಧಿಕಾರವಿದೆ. ಯಾವ ಕಾರಣಕ್ಕಾಗಿ ಇದುವರೆಗೂ ಕಿಂಗ್‌ಪಿನ್ ಗಳನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ ಅವರು, ಸರ್ಕಾರದ ವೈಫಲ್ಯಗಳನ್ನು ಮರೆಮಾಚಲು ಮುಖ್ಯಮಂತ್ರಿ ಇಂತಹ ಆಧಾರರಹಿತ ಆರೋಪ ಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.
ಪಕ್ಷ ಬಲಪಡಿಸಲು ಸೂಚನೆ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ೨೮ ಲೋಕಸಭೆ ಕ್ಷೇತ್ರಗಳ ಪೈಕಿ ಕನಿಷ್ಟ ೨೦-೨೩ ಕ್ಷೇತ್ರಗಳನ್ನು ನಾವು ಗೆಲ್ಲಬೇಕು. ಇದಕ್ಕಾಗಿ ಇಂದಿನಿಂದಲೇ ಶಾಸಕರು, ಪದಾಧಿಕಾರಿಗಳು, ಎಸ್ಸಿ ಎಸ್ಟಿ ಮಹಿಳಾ ಹಾಗೂ ರೈತ ಮೊರ್ಚಾಗಳು ಪಕ್ಷ ಸಂಘಟನೆಗಳಲ್ಲಿ ಪಾಲ್ಗೊಳ್ಳಬೇಕು. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಮೋದಿ ಮಾಡಿರುವ ಕೇಂದ್ರ ಸರ್ಕಾರದ ಸಾಧನೆಗಳು, ಸಮ್ಮಿಶ್ರ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿ ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ವಿಧಾನಸಭೆಯ ಉಪನಾಯಕ ಗೋವಿಂದ ಕಾರಜೋಳ, ವಿಧಾನಪರಿಷತ್ ಪ್ರತಿ ಪಕ್ಷದ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಮುಖಂಡರಾದ ಕೆ.ಎಸ್.ಈಶ್ವರಪ್ಪ, ಪ್ರಹ್ಲಾದ್ ಜೋಷಿ, ಶೆಟ್ಟರ್, ನಳಿನ್‌ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀರಾಮುಲು, ಅರವಿಂದ ಲಿಂಬಾವಳಿ, ರವಿಕುಮಾರ್, ಆರ್.ಅಶೋಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.