ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಭವಾನಿ ರೇವಣ್ಣ ಅವರಿಗೆ ರಾಜ್ಯ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್ಐಟಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ನ್ಯಾ. ಸೂರ್ಯಕಾಂತ್, ಉಜ್ಜಲ್ ಭುಯಾನ್ ಅವರಿದ್ದ ದ್ವಿ ಸದಸ್ಯ ಪೀಠ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿತು. ಎಸ್ಐಟಿ ಪರ ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.
ಸಂತ್ರಸ್ತೆಯ ಅಪಹರಣಕ್ಕೆ ಭವಾನಿ ನಿರ್ದೇಶನ ನೀಡಿದ್ದರು. ಅವರನ್ನು ಆರೋಪ ಮುಕ್ತ ಎಂದು ಹೇಳಲು ಸಾಧ್ಯವಿದೆ. ಅವರಿಗೆ ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತ್ತು. ಆದರೆ ಹೈಕೋರ್ಟ್ ಜಾಮೀನು ನೀಡಿದೆ ಎಂದು ಸಿಬಲ್ ವಾದಿಸಿದ್ದಾರೆ. ವಾದ ಆಲಿಸಿದ ಸುಪ್ರೀಂಕೋರ್ಟ್, ಭವಾನಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಹೆಚ್ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಬಾಬು ವಿರುದ್ಧ ದೂರು ದಾಖಲಾಗಿದೆ.
ಪ್ರಕರಣದಲ್ಲಿ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ಎರಡು ನೋಟಿಸ್ ನೀಡಿದೆ. ಆಗ ಭವಾನಿ ರೇವಣ್ಣ ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಲ್ಲಿ ನ್ಯಾಯಾಲಯವು ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು.
ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು. ಈ ಜಾಮೀನು ಪ್ರಶ್ನಿಸಿ ಎಸ್ಐಟಿ ಸುಪ್ರಿಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದೆ.