ಶಿವಮೊಗ್ಗ : ಜಿಲ್ಲೆಯಲ್ಲಿ ಅನಧಿಕೃತ ಮರಳುಗಾರಿಕೆಯನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಮರಳುಗಾರಿಕೆ ಮಾಡುವ ಸ್ಥಳದಲ್ಲಿ ಸಿಸಿ ಟಿವಿ ಅವಳವಡಿಕೆ ಹಾಗೂ ಸಾಗಾಟ ಲಾರಿಗೆ ಕಡ್ಡಾಯವಾಗಿ ಜಿಪಿಎಸ್ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮರಳು ನಿರ್ವಹಣಾ ಸಮಿತಿ ಸಭೆಯಲ್ಲಿ ಅನಧಿಕೃತ ಮರಳುಗಾರಿಕೆ ತಡೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕು ಮಟ್ಟದಲ್ಲಿ ಮರಳು ಸಾಗಾಟ ನಿರ್ವಹಣಾ ಸಮಿತಿಗಳನ್ನು ಈಗಾಗಲೇ ರಚಿಸಲಾಗಿದ್ದು, ಈ ಸಮಿತಿಗಳು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು. ಉಪವಿಭಾಗಾಧಿಕಾರಿ ಮಟ್ಟದಲ್ಲಿ ರಚಿಸಲಾಗಿರುವ ತಾಲೂಕು ಸಮಿತಿ ತಮ್ಮ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಈ ಅಧಿಕಾರಿಗಳ ತಂಡ ನಿರಂತರ ಗಸ್ತು ನಡೆಸುತ್ತಿದ್ದು, ಅನಧಿಕೃತ ಮರಳುಗಾರಿಕೆ ಬಗ್ಗೆ ದೂರು ಬಂದ ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಬೇಕು ಎಂದರು.
ಜಿಲ್ಲೆಯಲ್ಲಿ ಪ್ರಸ್ತುತ ಐದು ಮಂದಿಗೆ ಮರಳು ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ. ಇವರು ಕಡ್ಡಾಯವಾಗಿ ಮರಳುಗಾರಿಕೆ ಸ್ಥಳದಲ್ಲಿ ಸಿಸಿ ಟಿವಿ ಅಳವಡಿಸಬೇಕು ಎಂದರು.
ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ, ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ, ಜಿಲ್ಲಾ ಹಿರಿಯ ಭೂವಿಜ್ಞಾನಿ ರಶ್ಮಿ, ಉಪವಿಭಾಗಾಧಿಕಾರಿಗಳು ಉಪಸ್ಥಿತರಿದ್ದರು.