ಶಿವಮೊಗ್ಗ: ಕುವೆಂಪು ವಿವಿಯಲ್ಲಿನ ಹಗರಣಗಳಿಂದ ಮನನೊಂದು ವಿದ್ಯಾರ್ಥಿಯೊಬ್ಬ ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದು, ಆಕ್ರೋಶಗೊಂಡ ವಿದ್ಯಾರ್ಥಿಗಳು ಇಂದು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ಶಂಕರಘಟ್ಟದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಎಲ್ಲಾ ವಿಭಾಗದ ವಿದ್ಯಾರ್ಥಿಗಳು ಆಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು.
ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಯಾಗಿಲ್ಲ, ಫಲಿತಾಂಶ ವಿಳಂಬ ಮಾಡಲಾಗುತ್ತಿದೆ, ವಿವಿ ಹಾಸ್ಟೆಲ್ ಅವ್ಯವಸ್ಥೆ, ತರಗತಿ ಕೊಠಡಿಗಳು ಸೋರುತ್ತಿವೆ, ಅಂಕಪಟ್ಟಿ ಮತ್ತು ಪ್ರಮಾಣಪತ್ರ ನೀಡುವಲ್ಲಿ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಆತ್ಮಹತ್ಯೆ ಯತ್ನಕ್ಕೆ ಕಾರಣವನ್ನು ಗೆಳೆಯರ ವಾಟ್ಸ್ ಆ್ಯಪ್ ಗ್ರೂಪ್‌ಗೆ ಹಂಚಿಕೊಂಡಿರುವ ವಿದ್ಯಾರ್ಥಿಯು ವಿಷ ಸೇವಿಸಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿವಿಯ ಅವ್ಯವಸ್ಥೆಯಿಂದ ಬೇಸತ್ತಿದ್ದೇನೆ. ಜೊತೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದೇನೆ ಎಂದು ಹೇಳಿರುವುದಾಗಿ ತಿಳಿದು ಬಂದಿದೆ.
ಈ ಕುರಿತು ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.