ಶಿವಮೊಗ್ಗ : ರಾಜ್ಯ ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಜೂ. 3 ರಂದು ಮತದಾನ ನಡೆಯಲಿದ್ದು, ಚುನಾವಣಾಧಿಕಾರಿಗಳ ಆದೇಶದಂತೆ ಮತದಾನಕ್ಕೆ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೮ ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಜಿಲ್ಲಯಲ್ಲಿ ನೈರುತ್ಯ ಪದವೀಧರ ಒಟ್ಟು 27412 ಒಟ್ಟು 38 ಮತಕೇಂದ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 4365 ಮತದಾರರು ಇದ್ದು ಒಟ್ಟು 32 ಮತಕೇಂದ್ರಗಳನ್ನು ತೆರೆಯಲಾಗಿದ್ದು ಮತದಾರರು ತಮ್ಮ ಮತ ಇರುವ ಕೇಂದ್ರದಲ್ಲಿ ಮತದಾನ ಮಾಡಬಹುದಾಗಿದೆ ಎಂದರು.
ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ 200 ಮೀ. ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿದಂತೆ ಜೂ. ೧ ರಂದು ಅಪರಾಹ್ನ 4 ಗಂಟೆಯಿಂದ ಜೂನ್ ೩ ರ ಅಪರಾಹ್ನ 4 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ “ಒಣ ದಿನ” ಘೋಷಿಸಿ ಆದೇಶಿಸಲಾಗಿದೆ. ಹಾಗೆಯೇ ಮತದಾನಕ್ಕೆ ಅರ್ಹತೆ ಪಡೆದ ನೌಕರ ಸಿಬ್ಬಂದಿ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ ಉಪಸ್ಥಿತರಿದ್ದರು.