ಬೆಂಗಳೂರು: ಇಡೀ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಏರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಈ ಸಂಬಂಧ ಸರ್ಕಾರಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿದೆ.
ಇಂದು ಬೆಳಗ್ಗೆ ನ್ಯಾಯಾಲಯದ ಕಲಾಪ ಆರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಾಧೀಶ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಾಧೀಶ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ವಿಷಯ ಪ್ರಸ್ತಾಪಿಸಿತು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿ ಮಾಡಿ, ಜುಲೈ 23ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ರಾಜ್ಯದಲ್ಲಿ ಸೊಳ್ಳೆಗಳನ್ನು ನಿಯಂತ್ರಿಸಿ, ಡೆಂಗ್ಯೂ ಹರಡದಂತೆ ತಡೆಯಲು ಸರ್ಕಾರ ಕೈಗೊಂಡಿರುವ ಕ್ರಮಗಳು, ಈ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೈಗೊಂಡಿರುವ ಕ್ರಮಗಳು, ಸೊಳ್ಳೆಗಳ ಸಂಖ್ಯೆ ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿತು.
ಅಲ್ಲದೆ, ರಿಜಿಸ್ಟ್ರಾರ್ ಜನರಲ್ ಅವರು, ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಸರ್ಕಾರ ಎಲ್ಲಾ ಪ್ರಾಧಿಕಾರಗಳಿಗೆ ಅರ್ಜಿ ಸಲ್ಲಿಕೆಗೆ ಇರುವ ಪ್ರಕ್ರಿಯೆಗಳು ಪೂರ್ಣಗೊಳ್ಳದಿದ್ದರೂ ಇಂದೇ ನೋಟಿಸ್ ತಲುಪುವಂತೆ ವ್ಯವಸ್ಥೆ ಮಾಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು. ಈ ವೇಳೆ ಹಾಜರಾದ ಅಡ್ವೋಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಡೆಂಗ್ಯೂ ನಿಯಂತ್ರಣ ಮತ್ತು ಆರೋಗ್ಯ ಸೌಲಭ್ಯಗಳ ಕುರಿತಂತೆ ರಾಜ್ಯ ಸರ್ಕಾರ ಸೂಕ್ತ ಪ್ರತಿಕ್ರಿಯೆ ನೀಡುವುದಾಗಿ ಭರವಸೆ ನೀಡಿದರು.