ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಸೆಡ್ಡು: ಮೈಸೂರಿನಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ
ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಗೆ ಸೆಡ್ಡು ಹೊಡೆದ, ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಶುಕ್ರವಾರ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಿತು.
ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ಈ ಹಿಂದೆ ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ.ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವನಲ್ಲ, ಇದೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲಎಂದು ಗುಡುಗಿದರು.
ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು.
ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ದೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.
ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.
ನಾನು ಸೊನ್ನೆಯಿಂದ ರಾಜಕೀಯ ಪ್ರಾರಂಭಿಸಿದೆ. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250ರೂ ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂಪಾಯಿ ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದು ತಮ್ಮ ಸಚ್ಚಾರಿತ್ರ್ಯದ ಚರಿತ್ರೆಯನ್ನು ಬಿಚ್ಚಿಟ್ಟರು. ನನ್ನ ಒಂಬತ್ತು ಚುನಾವಣೆ ಗೆಲುವಲ್ಲೂ ಜನರೇ ಹಣ ಖರ್ಚು ಮಾಡಿ ನನ್ನನ್ನು ಗೆಲ್ಲಿಸಿದ್ದಾರೆ. ದಲಿತರು, ಶೋಷಿತರು, ಅಲ್ಪಸಂಖ್ಯಾತರ ಹಾಗೂ ಸಮಸ್ತ ಜನರ ಏಳಿಗೆಗಾಗಿ ಮಾತ್ರ ನನ್ನ ಅಧಿಕಾರ ಮುಡಿಪಾಗಿಟ್ಟಿದ್ದೇನೆ ಎಂದರು.