ಶಿವಮೊಗ್ಗ : ನಗರದಲ್ಲಿ ನಿನ್ನೆ ವಿದ್ಯಾರ್ಥಿ ಯೋರ್ವನ ಮೇಲೆ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿ ಗಳನ್ನು ಬಂಧಿಸಬೇಕೆಂದು ಒತ್ತಾಯಿಸಿ ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ನೇತೃತ್ವದಲ್ಲಿ ಇಂದು ಬಿಜೆಪಿ ನಾಯಕರು ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.
ಕಾಲೇಜು ವಿದ್ಯಾರ್ಥಿಯೋರ್ವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಗತ್ಯ ಕ್ರಮಕೈಗೊಳ್ಳಬೇಕು. ಕೂಡಲೇ ಘಟನೆಗೆ ಕಾರಣರಾದವರನ್ನು ಬಂಧಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ರಕ್ಷಣಾಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಇಲಾಖೆ ಸೂಕ್ತ ತನಿಖೆ ಆರಂಭಿಸಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು. ಇದಕ್ಕೂ ಮುನ್ನ ಕೆ.ಎಸ್.ಈಶ್ವರಪ್ಪ, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಎಸ್.ಎನ್.ಚನ್ನಬಸಪ್ಪ ಸೇರಿದಂತೆ ಹಲವಾರು ಮುಖಂಡರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಯನ್ನು ಭೇಟಿ ಮಾಡಿದ್ದರು.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಎಬಿವಿಪಿ ವತಿಯಿಂದ ಇಂದು ನಗರದ ಕೋಟೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಬೇಕು. ಆ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿದರು.
ಘಟನೆ ಹಿನ್ನೆಲೆಯಲ್ಲಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಕಾರ್ಯ ಕೈಗೊಂಡಿದೆ. ಅಲ್ಲದೆ, ಪೊಲೀಸ್ ವಾಹನಗಳು ನಗರದಲ್ಲಿ ಸಂಚರಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡಿದೆ. ಕಾಲೇಜು ಕ್ಯಾಂಪಸ್‌ಗಳಿಗೆ ಪೊಲೀಸ್ ಕಣ್ಗಾವಲು ಹಾಕಲಾಗಿದೆ.
ಶಿವಮೊಗ್ಗ: ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಘಟನೆ ನಗರದ ಗಾಂಧಿಪಾರ್ಕ್‌ನಲ್ಲಿ ನಡೆದಿದೆ. ಕೆ.ಆರ್.ಪುರಂ ನಿವಾಸಿ ಶಬರೀಶ್ (೧೮) ಇರಿತಕ್ಕೆ ಒಳಗಾದ ವಿದ್ಯಾರ್ಥಿ ಯಾಗಿದ್ಧಾನೆ. ನಿನ್ನೆ ಮಧ್ಯಾಹ್ನ ನಗರದ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಗುಂಪಿನ ನಡುವೆ ಸಣ್ಣ ಪ್ರಮಾಣದ ಗಲಾಟೆ ನಡೆದಿತ್ತು ಎನ್ನಲಾಗಿದೆ. ಶಬರೀಶ್ ನಿನ್ನೆ ಸಂಜೆ ಪಾರ್ಕ್‌ನಲ್ಲಿ ಸ್ನೇಹಿತರೊಂದಿಗೆ ಕುಳಿತಿದ್ದಾಗ ಸ್ಥಳಕ್ಕೆ ಧಾವಿಸಿದ ದುಷ್ಕರ್ಮಿಗಳು, ನೀವು ಯಾವ ಕಾಲೇಜಿನವರು ಎಂದು ಇವರುಗಳನ್ನು ಕೇಳಿದ್ದಾರೆನ್ನಲಾಗಿದೆ. ಈ ಸಂದರ್ಭದಲ್ಲಿ ಶಬರೀಶ್ ಜೊತೆಗಿದ್ದವರು ಪರಾರಿಯಾಗಿದ್ದು, ಸ್ಥಳದಲ್ಲೇ ಉಳಿದುಕೊಂಡ ಶಬರೀಶ್ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಶಬರೀಶ್‌ನನ್ನು ಮೊದಲು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.