ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರಕೃತಿದತ್ತವಾಗಿ ಮರಳು ಲಭ್ಯವಾಗುತ್ತಿದೆ. ಆದರೆ ಅದು ಜಿಲ್ಲೆಯಿಂದ ಇತರೆಡೆಗೆ ಪ್ರತಿದಿನ ಸಾವಿರಾರು ಲೋಡ್ ಸಾಗಾಣೆಯಾಗುತ್ತಿದೆ. ಜಿಲ್ಲೆಯ ಜನರಿಗೆ ಮರಳನ್ನು ನೀಡುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನಪರಿಷತ್‌ನ ವಿರೋಧದ ಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.
ಇಂದು ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಜಿ.ಪಂ. ತ್ರೈಮಾಸಿಕ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನರಿಗೆ ಮರಳು ದೊರೆ ಯದೇ ಪರದಾಡುವಂತಾಗಿದೆ. ಮರಳನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದ್ದು, ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಸರ್ಕಾರ ಗಮನಹರಿಸಬೇಕಾಗಿದೆ ಎಂದರು.
ಈ ಹಿಂದೆ ಟೆಂಡರ್ ಆಗಿದ್ದ ಬ್ಲಾಕ್‌ಗಳಿಂದ ಮಾತ್ರ ಮರಳನ್ನು ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಹೇಳುತ್ತಿದೆ. ಆದರೂ ಸಹ ಮರಳು ಕಳ್ಳ ಸಾಗಾಣಿಕೆಯನ್ನು ತಡೆಯು ವಲ್ಲಿಯೂ ಸಹ ಜಿಲ್ಲಾಡಳಿತ ಸೋತಿದೆ ಎಂದು ದೂರಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ೭ ಮರಳಿನ ಬ್ಲಾಕ್‌ಗಳಿಗೆ ಮರಳು ಗಾರಿಕೆಗೆ ಅನುಮತಿ ದೊರೆತಿದ್ದು, ಒಟ್ಟು ೩೦ಸಾವಿರ ಮೆಟ್ರಿಕ್ ಟನ್ ಮರಳು ಇದುವರೆಗೆ ತೆಗೆಯಲಾಗಿದೆ. ಉಳಿದ ಬ್ಲಾಕ್‌ಗಳಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಆದರೆ ಅರ್ಜಿದಾರರೊಬ್ಬರು ನ್ಯಾಯಾಲಯ ದಲ್ಲಿ ದಾವೆ ಹೂಡಿರುವುದರಿಂದ ತೊಂದರೆಯುಂಟಾಗಿದ್ದು, ನ್ಯಾಯಾ ಲಯ ತೀರ್ಪಿನಂತೆ ಕ್ರಮ ಕೈಗೊಂಡು ಮರಳು ಸುಲಭವಾಗಿ ಸಿಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕಾಗೋಡು ತಿಮ್ಮಪ್ಪ ಮಾತನಾಡಿ, ಗಂಗಾ ಕಲ್ಯಾಣ ಸೇರಿದಂತೆ ಕುಡಿಯುವ ನೀರಿನ ಕಾಮಗಾರಿಗಳನ್ನು ಮಾರ್ಚ್ ಒಳಗಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು ೨೬ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಮಂಜೂರಾಗಿದ್ದು, ಇವುಗಳ ಪೈಕಿ ೫ ಯೋಜನೆಗಳು ಅಂತಿಮ ಹಂತದಲ್ಲಿವೆ. ಮಲೆನಾಡಿನಲ್ಲಿ ಮಳೆಗಾಲದಲ್ಲಿ ಎಲ್ಲಾ ಕಡೆ ನೀರು ಲಭ್ಯವಾದರೂ ಬೇಸಿಗೆಯಲ್ಲಿ ಸಂಕಷ್ಟ ಎದುರಿಸುವ ಪರಿಸ್ಥಿತಿಯಿದೆ. ಆದ್ದರಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಪ್ರತಿ ತಾಲೂಕಿನಲ್ಲಿ ಕನಿಷ್ಟ ಎರಡು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಅನುಷ್ಟಾನ ಕುರಿತು ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಗ್ರಾಮೀಣ ಕುಡಿ ಯುವ ನೀರಿನ ಯೋಜನೆಯಡಿ ೨೨೩೩ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳ ಲಾಗಿದ್ದು, ೧೮೦೦ ಕಾಮಗಾರಿಗಳು ಪೂರ್ಣಗೊಳಿಸಲಾಗಿದೆ. ಇದಕ್ಕಾಗಿ ೩೧ಕೋಟಿ ರೂ. ಅನುದಾನ ವೆಚ್ಚ ಮಾಡಲಾಗಿದ್ದು, ಹಳೆಯ ಬಾಕಿ ಕಾಮಗಾರಿಗಳಿಗೆ ಪಾವತಿ ಪೂರ್ಣ ಗೊಳಿಸಲಾಗಿದೆ. ೨೦೧೮-೧೯ನೇ ಸಾಲಿನಿಂದ ಹೊಸದಾಗಿ ಕಾಮಗಾರಿ ಗಳನ್ನು ಆರಂಭಿಸಬಹುದಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿ.ಪಂ. ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಭಾನುಪ್ರಕಾಶ್, ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್, ಜಿ.ಪಂ. ಸಿಇಓರಾಕೇಶ್ ಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಅಭಿನವ ಖರೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.