ಶಿಕ್ಷಕರು ಆತ್ಮಸ್ಥೈರ್ಯದಿಂದ ಕೆಲಸ ಮಾಡಲಿ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಶಿಕ್ಷಕರು ಆತ್ಮಸ್ಥೈರ್ಯ ದಿಂದ ಕೆಲಸ ಮಾಡಿದಾಗ ಮಾತ್ರ ಉತ್ತಮ ವಿದ್ಯಾರ್ಥಿ ಮತ್ತು ಸಮಾಜವನ್ನು ರೂಪಿಸಲು ಸಾಧ್ಯ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಹೇಳಿದರು.
ಪ್ರಸ್ತುತ ಶೈಕ್ಷಣಿಕ ಸವಾಲುಗಳು ಮತ್ತು ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮ ಗೊಳಿಸುವ ಬಗ್ಗೆ ಅಂಬೇ ಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳೆಂದರೆ ಇಂದು ಸಮಸ್ಯೆಗಳ ಆಗರವಾಗಿದೆ. ಅವು ಗಳನ್ನು ಸರಿದಾರಿಗೆ ತರುವುದು ದೊಡ್ಡ ಸಮಸ್ಯೆಯಾಗಿದೆ. ಆದ್ದರಿಂದ ಶಿಕ್ಷಣ ಖಾತೆ ಯಾರಿಗೂ ಬೇಡ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಶಾಲೆಗಳ ಅಭಿವೃದ್ಧಿ ನಡೆಯಬೇಕಿದೆ ಆದರೆ ಇದಕ್ಕೆ ಹಣಕೊಡುವವರು ಯಾರು ಇಲ್ಲ ಎಂದು ಹೇಳಿದರು.
ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ರಾಷ್ಟ್ರನಿರ್ಮಾಣದ ಶಿಲ್ಪಿಗಳಾದ ಶಿಕ್ಷಕರು ಇಂದು ಸಮಸ್ಯಗಳಿಂದ ತುಂಬಿಹೋಗಿದ್ದಾರೆ. ಅವರ ಸಮಸ್ಯೆ ಬಗೆ ಹರಿದಾಗ ಮಾತ್ರ ಉತ್ತಮ ಶಿಕ್ಷಣ ದೊರೆಯಲು ಮತ್ತು ಒಳ್ಳೆಯ ಫಲಿತಾಂಶ ಪಡೆಯಲು ಸಾಧ್ಯ ಎಂದು ಹೇಳಿದರು.
ಅಧ್ಯಕ್ಷತೆಯನ್ನು ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ವೈ.ಎಂ. ಧರ್ಮಪ್ಪ ವಹಿಸಿದ್ದರು. ಡಿಡಿಪಿಐ ಪಿ.ಎಸ್. ಮಛಾಡೋ, ಬಿಇಒ ಗೀತಾ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಬಿ.ಸಿದ್ದಬಸಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಚಿಕ್ಕಮಗ ಳೂರಿನ ಸಾಹಿತಿ ಚಟ್ನಳ್ಳಿ ಮಹೇಶ್ ಪ್ರಸ್ತುತ ಶೈಕ್ಷಣಿಕ ಸವಾಲುಗಳ ಕುರಿತು ಉಪನ್ಯಾಸ ನೀಡಿದರು.