ಬೆಂಗಳೂರು: ಬಹುದಿನಗಳ ಬೇಡಿಕೆಯಂತೆ ಕರ್ನಾಟಕದ ಅಂಗನವಾಡಿಗಳಲ್ಲೇ ಖಾಸಗಿ ಶಾಲೆಗಳಂತೆ ಎಲ್‌ಕೆಜಿ. ಯುಕೆಜಿ ಶಿಕ್ಷಣ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು (ಜೂನ್ 24) ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಹೇಳಿದರು.
ಇನ್ನು ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಮಹಿಳಾ ಮತ್ತು ಮಕ್ಳಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಜಿ.ಸಿ.ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.