ಶಿವಮೊಗ್ಗ : ಎಸ್.ಎಸ್.ಎಲ್.ಸಿ.ಪರೀಕ್ಷಾ ಉತ್ತಮಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿ.ಪಂ. ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‌ಸಾಬ್ ಸಭಾಂಗಣ ದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃಧ್ದಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಿ.ಎಸ್.ಮಚ್ಛಾಧೋ ಮಾತನಾಡಿ, ಎಸ್.ಎಸ್.ಎಲ್.ಸಿ.ಪರೀಕ್ಷಾ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರೌಢಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಅಲ್ಲದೆ ಕೆಲವು ಕಡೆ ಮಕ್ಕಳನ್ನು ಶಾಲೆಯಲ್ಲಿಯೇ ಉಳಿಸಿಕೊಂಡು ಅವರ ಅಭ್ಯಾಸಕ್ಕೆ ಪೂರಕವಾಗಿ ಶ್ರಮಿಸಲಾಗುತ್ತಿದೆ ಎಂದರು.
ಜಿ.ಪಂ. ಸಿಇಓ ಡಾ.ಕೆ.ರಾಕೇಶ್ ಕುಮಾರ್ ಮಾತನಾಡಿ ಶೇ.೬೦ಕ್ಕಿಂತ ಕಡಿಮೆ ಫಲಿತಾಂಶವಿರುವ ಶಾಲೆಗ ಳನ್ನು ವಿಶೇಷವಾಗಿ ಗಮನಿಸಬೇಕೆಂದ ಅವರು, ಪ್ರಸಕ್ತ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬರಬಹುದಾದ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ತ್ವರಿತ ಹಾಗೂ ಸಕಾಲಿಕ ಕ್ರಮ ಕೈಗೊಳ್ಳುವಂತೆ ಹಾಗೂ ಅಗತ್ಯವಿ ರುವ ಅನುದಾನ ಬಿಡುಗಡೆ ಗೊಳಿ ಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಹುಕ್ಕೇರಿ ಅವರಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಸೂಚಿಸಿದರು.
ಭದ್ರಾವತಿ ತಾಲೂಕಿನ ಡಿ.ಬಿ.ಹಳ್ಳಿ ಯಲ್ಲಿರುವ ಕುಡಿಯುವ ನೀರಿನ ಸ್ಥಾವರ ಶಿಥಿಲಾವಸ್ಥೆಯಲ್ಲಿರುವ ಬಗ್ಗೆ ಮಾಹಿತಿ ಇದ್ದು, ಅದನ್ನು ಕೂಡಲೆ ನೆಲಸಮಗೊಳಿಸುವಂತೆ ಹಾಗೂ ಈ ಅವಧಿಯಲ್ಲಿ ಆ ಪ್ರದೇಶದ ನಿವಾಸಿಗಳಿಗೆ ಪರ್ಯಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆಯೂ ಅವರು ಸೂಚಿಸಿದರು.
ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಎದುರಾಗಬಹು ದಾಗಿದ್ದು, ಅದಕ್ಕೆ ಪೂರಕವಾಗಿ ಬೇಡಿಕೆಗನುಗುಣವಾಗಿ ಮೇವನ್ನು ಸಂಗ್ರಹಿಸಿಟ್ಟುಕೊಳ್ಳಲು ಕ್ರಮ ವಹಿಸುವಂತೆ ಜಿಲ್ಲಾ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಭಾಸ್ಕರ್‌ನಾಯ್ಕ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ವೇದಾವಿಜಯಕುಮಾರ್, ಡಿ.ಆರ್.ರೇಖಾ ಉಮೇಶ್. ವೀರೇಶ್ ಕೊಟಗಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.