ದಾವಣಗೆರೆ: ದಾವಣಗೆರೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ತುಂಗಾಭದ್ರಾ ನದಿಯು ಉಕ್ಕಿ ಹರಿಯುತ್ತಿದ್ದು, ಹೊನ್ನಾಳಿ, ಉಕ್ಕಡಗಾತ್ರಿ, ಹರಿಹರ ಸೇರಿದಂತೆ ಹಲವೆಡೆ ಪ್ರವಾಹ ಭೀತಿ ಶುರುವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ಸುರಿದ ಮಳೆಗೆ ಜಿಲ್ಲೆಯಲ್ಲಿ 93 ಮನೆಗಳು ಭಾಗಶಃ ಹಾನಿಯಾಗಿದ್ದು, 12 ಮನೆಗಳು ತೀವ್ರ ಹಾನಿಗೊಳಗಾಗಿವೆ. ಭಾಗಶಃ ಹಾನಿಯಾದ ಮನೆಗಳಿಗೆ 1.20 ಲಕ್ಷ ರೂ. ಪರಿಹಾರ ಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ತುಂಗಾ ಡ್ಯಾಂನಿಂದ ಅಪಾರ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವುದರಿಂದ ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಹೊನ್ನಾಳಿ ಪಟ್ಟಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರವಾಹದ ಭೀತಿ ತಲೆದೋರಿದ್ದು, ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.ಇನ್ನು ಹರಿಹರದಲ್ಲಿಯೂ ಪ್ರವಾಹ ಭೀತಿ ಇದ್ದು, ಜನರು ನೆರೆ ಆತಂಕದಲ್ಲಿದ್ದಾರೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹರಿಹರ ಆಡಳಿತ ಸೂಚನೆ ನೀಡಿದ್ದು, ಪ್ರವಾಹ ಎದುರಾದರೆ ಸರ್ವರೀತಿಯಲ್ಲಿಯೂ ಎದುರಿಸಲು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಚನ್ನಗಿರಿ, ಮಾಯಕೊಂಡ, ಜಗಳೂರು ಸೇರಿದಂತೆ ಎಲ್ಲೆಡೆ ಉತ್ತಮ ಮಳೆಯಾಗಿದೆ. ರೈತರಲ್ಲಿ ಮಂದಹಾಸ ಮೂಡಿದ್ದು, ಭತ್ತ ಬೆಳೆ ಬಿತ್ತನೆಗೆ ಅಣಿಯಾಗುತ್ತಿದ್ದಾರೆ. ಭದ್ರಾ ಜಲಾಶಯಕ್ಕೂ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಕಾರಣ ಮುಂಗಾರು ಬೆಳೆಗೆ ನೀರು ಸಿಗುವ ವಿಶ್ವಾಸದಲ್ಲಿ ರೈತರು ಇದ್ದಾರೆ. ಜಲಾಶಯದಿಂದ ನೀರು ಹರಿಸಿದರೆ ಭತ್ತ ನಾಟಿ ಮಾಡಲು ರೈತರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.