ಶಿವಮೊಗ್ಗ: ಶಿಕಾರಿಪುರ-ರಾಣೇಬೆನ್ನೂರು ನೂತನ ರೈಲ್ವೇ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮೊದಲ ಮತ್ತು ದ್ವಿತೀಯ ಹಂತದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ನಿಯಮಾನುಸಾರ ಬಾದಿತ ರೈತರಿಗೆ ಪರಿಹಾರಧನ ವಿತರಿಸಲು ಕ್ರಮ ಕೈಗೊಂಡು ವರದಿ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಶಿವಮೊಗ್ಗ- ಶಿಕಾರಿಪುರ –ರಾಣೆಬೆನ್ನೂರು ರೈಲ್ವೇ ಲೈನ್ ವಿಸ್ತರಣೆ, ಭೂಸ್ವಾದೀನ ಪ್ರಕ್ರಿಯೆ, ಪರಿಹಾರ ಧನ ವಿತರಣೆ, ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭೂಸ್ವಾದೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ ಎದುರಾಗಬಹುದಾದ ಸಮಸ್ಯೆಗಳನ್ನು ಕೂಡಲೇ ಇಲಾಖಾ ಅಧಿಕಾರಿಗಳು ಪೂರ್ಣಗೊಳಿಸಬೇಕು. ಮೊದಲ ಹಂತದ ಮಾರ್ಗದಲ್ಲಿ ಭೂಸ್ವಾದೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡು ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಹಸ್ತಾಂತರಿಸಲಾದ ಭೂಮಿಯಲ್ಲಿ ಗುತ್ತಿಗೆದಾರರು ಕಾಮಗಾರಿಯನ್ನು ಆರಂಭಿಸಬೇಕು. ಅಲ್ಲದೇ ರೈತರು ಮತ್ತೆ ಕೃಷಿ ಚಟುವಟಿಕೆ ಆರಂಭಿಸಿ ಕಾಮಗಾರಿ ವಿಳಂಬಕ್ಕೆ ಕಾರಣವಾಗದಂತೆ ನೋಡಿಕೊಳ್ಳಬೇಕು ಎಂದರು.
ಶಿಕಾರಿಪುರ ತಾಲೂಕಿನ ಎಳನೀರುಕೊಪ್ಪ ಗ್ರಾಮದಲ್ಲಿ ರೈಲ್ವೇ ಇಲಾಖೆಯವರು ನಿಗಧಿಪಡಿಸಿದ ಭೂಮಿಗಿಂತ ಹೆಚ್ಚಿನ ಭೂಪ್ರದೇಶ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ದೂರುಗಳಿವೆ. ಕೂಡಲೇ ಸಂಬಂಧಿಸಿದ ಸರ್ವೇ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಈಗಾಗಲೇ ಕೈಗೊಂಡಿರುವ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಿ, ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರ್, ಮೈಸೂರು ನೈಋತ್ಯ ರೈಲ್ವೇ ಡೆಪ್ಯೂಟಿ ಚೀಫ್ ಇಂಜಿನಿಯರ್ ಪ್ರದೀಪ್‍ಪುರಿ, ಮೂರ್ತಿರಾಜು, ವೂಟನ್, ಹರ್ಷವರ್ಧನ್, ಮಹಾನಗರಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ವಿಶೇಷ ಭೂಸ್ವಾದೀನಾಧಿಕಾರಿ ನಜ್ಮಾಬಾನು, ಉಪವಿಭಾಗಾಧಿಕಾರಿ ಯತೀಶ್, ಪ್ರೊಬೇಷನರ್ ಐಎಎಸ್ ಅಧಿಕಾರಿ ದೃಷ್ಠಿಜೈಸ್ವಾಲ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.