ಬೆಂಗಳೂರು: ಕೇಂದ್ರವು ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡುವ ಪರಿಸ್ಥಿತಿ ನಮ್ಮರಾಜ್ಯ ಸರಕಾರಕ್ಕೆ ಉಂಟಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಗೃಹ ಕಚೇರಿ ಕೃಷ್ಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ದರ ಕಡಿಮೆ ಇದೆ ಎಂದು ಅವರು ಹೇಳಿದರು.
2015ರ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಅರ್ಧಕ್ಕರ್ಧ ಕಡಿಮೆ ಅದಾಗಲೂ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಸುತ್ತಾ ಹೋಗಿದೆ ಎಂಬುದನ್ನು ಅವರು ವಿವರಿಸಿದರು.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಹೆಚ್ಚಳದಿಂದ ಸಂಗ್ರಹವಾಗುವ ಅಂದಾಜು ೩ ಸಾವಿರ ಕೋಟಿ ರೂಪಾಯಿಗಳು ರಾಜ್ಯದ ಖಜಾನೆಗೆ ಸಂದಾಯವಾಗುತ್ತದೆ, ಆ ಹಣ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗವಾಗುತ್ತದೆ. ಅದು ನಮ್ಮ ಜೇಬಿಗೆ ಹೋಗುವುದಿಲ್ಲ ಎಂದರು.
ಗ್ಯಾರಂಟಿ ಯೋಜನೆಗಳಿಗೆ ರಾಜ್ಯವು 60,೦೦೦ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಈಗಿನ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು 3 ಸಾವಿರ ಕೋಟಿ ರೂಪಾಯಿ ಮಾತ್ರ. ಆದರೆ ಗ್ಯಾರಂಟಿಗಳಿಗೆ ನಾವು ಕೊಡುತ್ತಿರುವುದು 60 ಸಾವಿರ ಕೋಟಿ ರೂಪಾಯಿ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕೆಂದು ತಿಳಿಸಿದರು.