ಬೆಂಗಳೂರು : ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಶುಕ್ರವಾರ ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಜೂನ್ 1 ರಿಂದ ಆಗಸ್ಟ್ 15 ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟು ಹೆಚ್ಚು ಮಳೆಯಾಗಿದ್ದು, ಚಾಮರಾಜನಗರ, ಮಂಡ್ಯ ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ.ಮುಂದಿನ ನಾಲ್ಕು ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಗಳನ್ನು ಕೈಗೊಳ್ಳಬೇಕಿದೆ ಎಂದರು.
ರಾಜ್ಯಾದ್ಯಂತ 82 ಲಕ್ಷ ಹೆಕ್ಟೇರ್ ಗುರಿಗೆ ಎದುರಾಗಿ 7೦ ಲಕ್ಷ ಹೆಕ್ಟೇರ್ ಬಿತ್ತನೆ ಆಗಿದೆ. ಈ ಬಾರಿ ಗುರಿ ಮೀರಿ ಸಾಧನೆ ಆಗುವ ನಿರೀಕ್ಷೆ ಇದೆ. ಮುಂಗಾರು ಪೂರ್ವ ಬಿತ್ತನೆ ಆಗಿರುವ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ. ಮಳೆಯಿಂದ 81589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು.ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿವಿಧ ಏತ ನೀರಾವರಿ ಯೋಜನೆಗಳಡಿ ಎಲ್ಲೆಲ್ಲಿ ಅವಕಾಶವಿದೆಯೋ ಅಲ್ಲೆಲ್ಲ ಕೆರೆಗಳಿಗೆ ನೀರು ತುಂಬಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಆ ಮೂಲಕ ಅಂತರ್ಜಲ ಮಟ್ಟ, ಕುಡಿಯುವ ನೀರಿನ ಸಮಸ್ಯೆ ಕಡಿಮೆಯಾಗುವುದು ಎಂದು ತಿಳಿಸಿದರು.
ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ ಒಟ್ಟು 67 ಸಾವು ಸಂಭವಿಸಿದ್ದು, 66 ಪ್ರಕರಣಗಳಲ್ಲಿ 329 ಲಕ್ಷ ರೂ. ಪರಿಹಾರ ಒದಗಿಸಲಾಗಿದೆ. ಅಂಗನವಾಡಿ , ಶಾಲೆ ಕಟ್ಟಡಗಳ, ಸೇತುವೆಗಳು, ಕರೆಗಳು ಸುಸ್ಥಿತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಹಾಗೆಯೇ ಮಲೆನಾಡು, ಕರಾವಳಿ ಭಾಗಗಳಲ್ಲಿ ಇರುವ ಹಳೇ ಶಾಲಾ ಕಟ್ಟಡಗಳನ್ನು ಗುರುತಿಸಿ, ಕ್ರಿಯಾ ಯೋಜನೆಯಲ್ಲಿ ಆದ್ಯತೆ ಮೇರೆಗೆ ದುರಸ್ತಿ ಪಡಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಸಲಾಗಿದೆ. 20 ಸಾವಿರ ರೂ. ಅನುದಾನ ಒದಗಿಸಲಾಗಿದೆ. ಸಾವು ನೋವು ತಪ್ಪಿಸುವುದು ನಮ್ಮ ಆದ್ಯತೆ. ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಬಲಪಡಿಸಲು ಕ್ರಮ ಕೈಗೊಳ್ಳಬೇಕು. ಮನೆ ಕುಸಿತ, ನೀರಿನಲ್ಲಿ ಕೊಚ್ಚಿ ಹೋಗುವಂತಹ ಪ್ರಕರಣಗಳಲ್ಲಿ ಸಾವು ನೋವು ತಪ್ಪಿಸಲು ಸಾಧ್ಯವಿದೆ. ಶಿಥಿಲವಾದ ಮನೆಗಳನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಗ್ರಾಮಮಟ್ಟದಲ್ಲಿ ಮೊದಲೇ ಗುರುತಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.