ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿದೆ.
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಸೂರಜ್ ಬಂಧನವಾಗಿ, ಸದ್ಯ ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.
ಸಿಆರ್‌ಪಿಸಿ 437 ಅಡಿ ಸೂರಜ್ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ರೇವಣ್ಣ ಪರವಾಗಿ ವಕೀಲ ಅರುಣ್ ಶ್ಯಾಮ್ ವಾದಿಸಿದರು.
ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜು. 3ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಸೂರಜ್‌ನ ಜು. 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದರು.
ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾದರೆ ಜೀವಾವಧಿ ಅಥವಾ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.