ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಗೆ ರಾಜ್ಯದ ಹಲವೆಡೆ ಸುರಿಯುತ್ತಿದೆ. ಈ ಮಳೆಯಿಂದಾಗುವ ದುರಂತಗಳನ್ನು ತಪ್ಪಿಸುವ ಮುಂಜಾಗೃತ ಕ್ರಮವಾಗಿ ಧಾರವಾಡ, ಬೆಳಗಾವಿ, ಕೊಡಗು, ಹಾವೇರಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರಜೆ ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಹಾವೇರಿ ಜಿಲ್ಲಾದ್ಯಂತ ಇಂದು ಮತ್ತು ರಜೆ ಘೋಷಿಸಲಾಗಿದೆ. ಅಂಗನವಾಡಿ , ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಆದೇಶಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕುಗಳು ಅಂದರೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗೆ ಇಂದು ಮತ್ತು ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ವ್ಯಾಪಕ ಮಳೆಯ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಿ ಡಿಸಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಶಾಲಾ ಕಾಲೇಜುಗಳಿಗೆ ರಜೆ ನೀಡಿದೆ. ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ರಜೆ ಘೋಷಣೆಯ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಾಟ್ಕಳ, ದಾಂಡೆಲಿ, ಜೋಯಿಡಾ, ಹಲಿಯಾಳ ಮತ್ತು ಯಲ್ಲಾಪುರಗಳ ಶಾಲಾ ಕಾಲೇಜ್ಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.