ಶ್ರೀಂಗೇರಿ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಸೋಮವಾರ ಮುಂಜಾನೆಯಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ. ಹಳ್ಳ-ಕೊಳ್ಳ, ಕೆರೆ-ಕಟ್ಟೆ, ನದಿಗಳಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.
ಮತ್ತೊಂದೆಡೆ ಕೊಗ್ರೆ-ಶೃಂಗೇರಿ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರು ಸಂಚಾರಕ್ಕೆ ಪರದಾಡುವಂತಾಗಿದೆ. ಭಾನುವಾರ ರಾತ್ರಿಯಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣ ತುಂಗಾ ನದಿ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ.
ಭದ್ರಾ ನದಿ ಅಬ್ಬರದಿಂದ ಕಳಸ ತಾಲೂಕಿನ ಹೊರನಾಡು ಸೇತುವೆ ಬಳಿ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಸೇತುವೆಯ ಮೇಲೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮೂಡಿಗೆರೆ ತಾಲೂಕಿನ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದೆ. ಗೊರೂರು ಡ್ಯಾಂ ನಿಂದ ನೀರು ಹರಿಸಲಾಗಿದೆ.
ಶೃಂಗೇರಿ ಪಟ್ಟಣದಲ್ಲಿ ತುಂಗಾ ನದಿ ಅಪಾಯದ ಮಟ್ಟವನ್ನು ಮೀರಿದೆ. ಆದ್ದರಿಂದ ಶ್ರೀ ಶಾರದಾಂಬೆ ದರ್ಶನಕ್ಕೆ ಹೋಗುವ ಭಕ್ತರು ತುಂಗಾ ನದಿ ಸಮೀಪ ಹೋಗದಂತೆ, ಮಕ್ಕಳು, ವೃದ್ಧರ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ದೇವಾಲಯದ ಸಮೀಪದ ರಸ್ತೆಗೆ ಈಗಾಗಲೇ ತುಂಗಾ ನದಿ ನೀರು ನುಗ್ಗಿದೆ.
ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿವೆ. ಹಲವು ಹಳ್ಳಿಗಳಿಗೆ ಹೋಗುವ ಮಾರ್ಗಗಳು ಬಂದ್ ಆಗಿವೆ.