ಬೆಂಗಳೂರು: ಕೇಂದ್ರ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯವು ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಸಚಿವರ ಹೆಸರು ಹೇಳುವಂತೆ ನಿಗಮದ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಮುಖ್ಯಮಂತ್ರಿ @siddaramaiah ಅವರ ಮುಂದಾಳತ್ವದಲ್ಲಿ ಸಚಿವರು ಹಾಗೂ ಶಾಸಕರು ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರಿಗೆ ಕೇಂದ್ರೀಯ ತನಿಖಾ ಸಂಸ್ಥೆಗಳು ಕಿರುಕುಳ ನೀಡುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು, ಸಂಪುಟ ಸಚಿವರು ಮಂಗಳವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು.
ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳದಂತಹ ಕೇಂದ್ರೀಯ ಸಂಸ್ಥೆಗಳು ತಮ್ಮ ಹೇಳಿಕೆಗಳಲ್ಲಿ ಸಿದ್ದರಾಮಯ್ಯ ಅವರ ಹೆಸರನ್ನು ಹೇಳುವಂತೆ ಸರ್ಕಾರಿ ಅಧಿಕಾರಿಗಳನ್ನು ಒತ್ತಾಯಿಸುತ್ತಿವೆ ಎಂದು ಪಕ್ಷ ಆರೋಪಿಸಿದೆ. ವಾಲ್ಮೀಕಿ ಹಗರಣದ ತನಿಖೆ ವೇಳೆ ಮುಖ್ಯಮಂತ್ರಿ ಹೆಸರನ್ನು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ದೂರು ದಾಖಲಿಸಿದ ನಂತರ ಪಕ್ಷವು ಪ್ರತಿಭಟನೆ ನಡೆಸಿತು.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ತಿಳಿದ ತಕ್ಷಣ ನಮ್ಮ ಎಸ್ ಐಟಿ ರಚಿಸಿ, ಹಲವರನ್ನು ಬಂಧಿಸಿ, ಶೇ.50ಕ್ಕೂ ಹೆಚ್ಚಿನ ಹಣವನ್ನು ತೆಲಂಗಾಣದಿಂದ ಹಿಂಪಡೆಯಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ನಮ್ಮ ಸಚಿವರು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಇಡಿ ಮಧ್ಯಪ್ರವೇಶ ಮಾಡಿದೆ. ನಮ್ಮ ತನಿಖೆಯಲ್ಲಿ ಲೋಪವಿದ್ದಾಗ ಬರಬಹುದಿತ್ತು. ಆದರೆ ನಮ್ಮ ತನಿಖೆ ಮುಗಿಯುವ ಮುನ್ನವೇ ಮಧ್ಯಪ್ರವೇಶ ಮಾಡಿದ್ದಾರೆ ಎಂದು ತಿಳಿಸಿದರು.
ಇ ಡಿ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ವ್ಯವಸ್ಥಾಪಕ ನಿರ್ದೇಶಕರಾದ ಕಲ್ಲೇಶ್ ಅವರಿಗೆ ಬೆದರಿಕೆ ಹಾಕಿ, ಈ ಪ್ರಕರಣದಲ್ಲಿ ಮಂತ್ರಿ, ಮುಖ್ಯಮಂತ್ರಿ ಹೆಸರು ಹೇಳಿಸುವ ಒತ್ತಡ ಹಾಕುತ್ತಿದ್ದಾರೆ. ಇವರ ಹೆಸರು ಹೇಳದಿದ್ದರೆ ಏಳು ವರ್ಷ ಜೈಲು ಶಿಕ್ಷೆ ಅನುಭಿಸಬೇಕಾಗುತ್ತದೆ ಎಂದು ಇಡಿ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ಮನನೊಂದ ಅಧಿಕಾರಿ, ಇಡಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.