ಬೆಂಗಳೂರು: ಪಕ್ಷದ ಕಾರ್ಯಕರ್ತರ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಯ ಸ್ವಚ್ಚತಾ ಸಿಬ್ಬಂದಿಗೆ ಮನೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ವೇಳೆ ಕೆಪಿಸಿಸಿ ಕಚೇರಿಯ ಸ್ವಚ್ಛತಾ ಸಿಬ್ಬಂದಿ ಆಶಾ, ಸುಗಂತಿ, ಜಯಂತಿ ಮತ್ತು ಅರ್ಚನಾ ಅವರು ತಮಗೆ ಮನೆಗಳನ್ನು ಕೊಡಿಸುವಂತೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗೆ ಸ್ಥಳದಿಂದಲೇ ಕರೆ ಮಾಡಿ ಸ್ವಚ್ಛತಾ ಸಿಬ್ಬಂದಿಯ ದಾಖಲೆ ಪರಿಶೀಲನೆ ನಡೆಸಿ ಅರ್ಹತೆ ಆಧಾರದಲ್ಲಿ ಮನೆಗಳನ್ನು ಒದಗಿಸಿಕೊಡುವಂತೆ ಸೂಚಿಸಿದರು.
ನಾವು ಕಾಂಗ್ರೆಸ್ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಾ ಇದ್ದೇವೆ. ನಮಗೆ ಮನೆ ಕೊಡಿ ಎಂದು ಜಯಂತಿ, ಅರ್ಚನಾ, ಸುಗಂಧಿ, ಆಶಾ, ಸಂಧ್ಯಾ ಅವರು ಮನವಿ ಸಲ್ಲಿಸಿದಾಗ “ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಾ ಇದ್ದೀರಾ. ನಿಮಗೆ ರಾಜೀವ್ ಗಾಂಧಿ ವಸತಿ ನಿಗಮದ ಅಡಿ ಮನೆ ನೀಡುವಂತೆ ಕ್ರಮ ತೆಗೆದುಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯಸಭಾ ಸಂಸದರಾದ ಜಿ.ಸಿ. ಚಂದ್ರಶೇಖರ್, ಶಾಸಕರಾದ ತನ್ವೀರ್ ಸೇಟ್ ಅವರು ಅಹವಾಲು ಸಲ್ಲಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು.