ಶಿವಮೊಗ್ಗ,ಜು.೧೩:ವಿದ್ಯಾರ್ಥಿಗಳು ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಲು ಶಿಕ್ಷಕರು ಹಾಗೂ ಪೋಷಕರ ಪಾತ್ರ ಮುಖ್ಯ ಆಗಿರುತ್ತದೆ. ದೇಶದ ಇತಿಹಾಸದಲ್ಲಿನ ಶ್ರೇಷ್ಠ ವ್ಯಕ್ತಿಗಳ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಕೆಲಸ ಆಗಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜಿನ ವತಿಯಿಂದ ಆಯೋಜಿಸಿದ್ದ ೨೦೨೩-೨೪ ನೇ ಸಾಲಿನ ಪ್ರತಿಭಾ ಪುರಸ್ಕಾರ, ೨೦೨೪-೨೫ನೇ ಸಾಲಿನ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ, ಸಾಂಸ್ಕೃತಿಕ ವೇದಿಕೆ, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಕೆ.ಸಿ.ಶಶಿಧರ್ ಮಾತನಾಡಿ, ಶಿಕ್ಷಣ ಜತೆಗೆ ಸದೃಢ ಭವಿಷ್ಯ ರೂಪಿಸಿಕೊಳ್ಳುವ ಕೌಶಲ್ಯ ಅಗತ್ಯ. ವಿದ್ಯಾರ್ಥಿಗಳು ಶಿಕ್ಷಣದ ನಂತರ ಆಯ್ಕೆ ಮಾಡುವ ವಿಷಯದಲ್ಲಿ ವಿಶೇಷ ಜಾಗೃತಿ ವಹಿಸಬೇಕು. ಸಾಧನೆಯ ಹಾದಿಯಲ್ಲಿ ಮುನ್ನಡೆಯಲು ಅಗತ್ಯ ಜೀವನಶೈಲಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ದೇಶಿಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಡಿವಿಎಸ್ ಸಮಿತಿ ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿನ ಪ್ರಾಚಾರ್ಯ ಎ.ಇ.ರಾಜಶೇಖರ್, ಶಿಕ್ಷಕ ಪ್ರತಿನಿಧಿ ಎಚ್.ಸಿ.ಉಮೇಶ್, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಉಪನ್ಯಾಸಕರು, ಸಿಬ್ಬಂದಿ ಉಪಸ್ಥಿತರಿದ್ದರು.