ಬೆಂಗಳೂರು: “ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ” ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಚಳವಳಿ ಆರಂಭಿಸಿದ್ದು, ಇಂದಿನಿಂದ(ಜುಲೈ 1) ರಾಜ್ಯಾದ್ಯಂತ ಬೃಹತ್ ಧರಣಿ ಸತ್ಯಾಗ್ರಹ ನಡೆಸುತ್ತಿದೆ.
ಈ ನಡುವೆ ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದ ನಿಯೋಗವು ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಿತು.
ಕರವೇ ನಿಯೋಗದ ಭೇಟಿಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕರವೇ ನಿಯೋಗದವರು ಉದ್ಯೋಗ ನೀಡುವ ವಿಚಾರದಲ್ಲಿ ವಿಶೇಷ ಕಾನೂನು ಮಾಡಿ ಎಂದು ವಿನಂತಿಸಿಕೊಂಡಿದ್ದಾರೆ. ಈ ವಿಚಾರವನ್ನು ಸಂವಿಧಾನದ ಹಿನ್ನೆಲೆಯಲ್ಲಿ ಅಡ್ವೊಕೇಟ್ ಜನರಲ್ ಜೊತೆಗೆ ಚರ್ಚಿಸುತ್ತೇನೆ” ಎಂದು ತಿಳಿಸಿದರು.
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿರುವುದರ ಬಗ್ಗೆ ಪತ್ರಕರ್ತರು ಕೇಳಿದಾಗ, “ಈ ವರದಿ ಜಾರಿಗೆ ಮಾಡಿ ಎನ್ನುವುದು ಒಂದು ಭಾಗವಷ್ಟೇ. ಉದ್ಯೋಗಕ್ಕಾಗಿ ಕಾನೂನು ಮಾಡಿ ಅಂತ ಕೇಳಿಕೊಂಡಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಪರಿಶೀಲಿಸಿ, ಕ್ರಮ ಕೈಗೊಳ್ಳುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.